ರಾಜ್ಯಾದ್ಯಂತ ಗುರುವಾರ ಕೊರೊನಾ ವೈರಸ್ ಭೀತಿಯ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆನಡೆದಿದ್ದು, ನಿನ್ನೆ ನಡೆದ ಮೊದಲ ಪರೀಕ್ಷೆ ದ್ವಿತೀಯಭಾಷೆ ಇಂಗ್ಲಿಷ್/ಕನ್ನಡ ಪತ್ರಿಕೆಗೆ ಒಟ್ಟು 13,262 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪ್ರಾಥಮಿಕ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ .

ಎಸ್ ಎಸ್ ಎಲ್ ಸಿ ಪರೀಕ್ಷೆ ಕುರಿತಂತೆ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್ , ಮೊದಲ ದಿನವಾದ ಗುರುವಾರ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಒಟ್ಟಾರೆ 7,85,140 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 7,71,878 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 13,262 ಮಂದಿ ಗೈರು ಹಾಜರಾಗಿದ್ದರು. ಶೇ. 98.3 ರಷ್ಟು ವಿದ್ಯಾರ್ಥಿಗಳು ಯಶಸ್ವಿಯಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಹೇಳಿದರು.
ರಾಜ್ಯದ 2,879 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ವಿದ್ಯಾರ್ಥಿಗಳಿಗಾಗಿ 3212 ಬಸ್ ವ್ಯವಸ್ಥೆ ಮಾಡಲಾಗಿತ್ತು. ಕಂಟೈನ್ ಜೋನ್ 998 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. ಗೈರಾದ ಮಕ್ಕಳಿಗೂ ಪೂರಕ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.